Gummata Nagari

Headlines

ಒತ್ತಡದ ಬದುಕಿಗೆ ಕ್ರೀಡೆ ಸಹಕಾರಿ : ಜಿಲ್ಲಾಧಿಕಾರಿ ಟಿ.ಭೂಬಾಲನ್

 

 

ಬಿಜಾಪುರ: ದೈನಂದಿನ ಕೆಲಸದ ಒತ್ತಡದ ಮಧ್ಯೆಯೂ ಮನಸ್ಸು ಮತ್ತು ದೇಹಕ್ಕೆ ಚೈತನ್ಯ ಒದಗಿಸಲು ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಸಹಕಾರಿಯಾಗಿದ್ದು, ದೈನಂದಿನ ಜೀವನದಲ್ಲಿ ಚಟುವಟಿಕೆಯಿಂದಿರಲು ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಲ್ಲಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಕರೆ ನೀಡಿದರು.

ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ಸಹಯೋಗದಲ್ಲಿ ಇಂದು ಹಮ್ಮಿಕೊಂಡ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಒತ್ತಡದ ಬದುಕಿನಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯವಶ್ಯಕವಾಗಿದೆ. ಪ್ರತಿದಿನ ಚೈತನ್ಯದಿಂದರಲು ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಹೆಚ್ಚೆಚ್ಚು ತೊಡಗಿಸಿಕೊಂಡು ದೈನಂದಿನ ಬದುಕಿನ ಜೀವನಶೈಲಿಯಾಗಿಸಿಕೊಳ್ಳಬೇಕು. ಕ್ರೀಡೆಯಲ್ಲಿ ಸೋಲು-ಗೆಲವು ಸಾಮಾನ್ಯವಾಗಿದ್ದು, ಭಾಗವಹಿಸುವಿಕೆ ಅತಿಮುಖ್ಯವಾಗಿರುತ್ತದೆ. ಆ ನಿಟ್ಟಿನಲ್ಲಿ ಇಲ್ಲಿ ಹಮ್ಮಿಕೊಂಡಿರುವ ಎಲ್ಲ ಕ್ರೀಡೆಗಳಲ್ಲಿ ಕ್ರೀಡಾ ಮನೋಭಾವದಿಂದ ಭಾಗವಹಿಸಿ ಕ್ರೀಡಾ ಸ್ಪೂರ್ತಿ ಮೆರೆಯಬೇಕು. ಕ್ರೀಡೆಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ರಾಜ್ಯಮಟ್ಟಕ್ಕೂ ಜಿಲ್ಲೆಯ ಸ್ಪರ್ಧಾಳುಗಳು ಭಾಗವಹಿಸಲಿ ಎಂದು ಹಾರೈಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಕ್ರೀಡೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ನಮ್ಮ ವ್ಯಕ್ತಿತ್ವವನ್ನು ಸದೃಢಗೊಳಿಸಲು ಪೂರಕವಾಗಿ ಸಹಕಾರಿಯಾಗಿವೆ. ದೇಹ ಮತ್ತು ಮನಸ್ಸು ಆರೋಗ್ಯವಾಗಿರಲು ಕ್ರೀಡೆ ಅತ್ಯುತ್ತಮ ಸಾಧನವಾಗಿದೆ. ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳುವುದರಿಂದ ಆತ್ಮವಿಶ್ವಾಸ ಹೆಚ್ಚುತ್ತದೆ ಜೊತೆಗೆ ಸಂವಹನ ಕೌಶಲ್ಯ ವೃದ್ಧಿಯಾಗುತ್ತದೆ ಎಂದು ಹೇಳಿದರು.
ಆಲೋಚನಾ ಮಟ್ಟ ಹೆಚ್ಚಿಸುವಲ್ಲಿ ಹಾಗೂ ಜೀವನದಲ್ಲಿ ಶಿಸ್ತನ್ನು ರೂಢಿಸಿಕೊಳ್ಳಲು ಸಮರ್ಪಣೆ ಹಾಗೂ ತಾಳ್ಮೆಯ ಮೌಲ್ಯ ಕಲಿಸಿಕೊಡುವಲ್ಲಿ ಆಟೋಟಗಳ ಪಾತ್ರ ಬಹುಮುಖ್ಯವಾಗಿದೆ. ಆದ್ದರಿಂದ ಪ್ರತಿಯೊಬ್ಬರು ನಿಯಮಿತವಾಗಿ ಒಂದಾದರೊAದು ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮತದಾನ ಜಾಗೃತಿಗಾಗಿ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಹೊಂಗಯ್ಯ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ರಾಜಶೇಖರ ಧೈವಾಡಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶೇಡಶ್ಯಾಳ, ಜಾವೀದ ಎಂ.ಜಮಾದಾರ, ಎಸ್.ಎಸ್.ಕೆರೂರ, ವಿಜಯಕುಮಾರ ಹತ್ತಿ, ವಿಶ್ವನಾಥ ಬೆಳೆನ್ನವರ, ಗಂಗಾಧರ ಜೇವೂರ, ನಿಜು ಮೇಲಿನಕೇರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

 

Most Popular

To Top
error: Content is protected !!