ದುರ್ಬಲರ ರಕ್ಷಣೆಯೇ ಸಂವಿಧಾನದ ಆಶಯ

ಜನಜಾಗೃತಿ ಸಂಚಾರಿ ವಾಹನಕ್ಕೆ ನ್ಯಾ. ಅಡಿಗರಿಂದ ಚಾಲನೆ

0

Gummata Nagari : Dharwad News

ಧಾರವಾಡ : ಮಹಿಳೆ, ಮಕ್ಕಳು, ವೃದ್ಧರು ಸೇರಿದಂತೆ ಎಲ್ಲ ಪ್ರಕಾರದ ದುರ್ಬಲರ ರಕ್ಷಣೆಯು ನಮ್ಮ ಸಂವಿಧಾನದ ಆಶಯವಾಗಿದ್ದು, ಪ್ರತಿಯೊಬ್ಬ ನಾಗರಿಕರು ಸಂವಿಧಾನದ ಆಶಯ ಈಡೇರಿಸಲು ಶ್ರಮಿಸಬೇಕೆಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಉಮೇಶ ಅಡಿಗ ಅವರು ಹೇಳಿದರು.

ಅವರು ಇಂದು ಬೆಳಿಗ್ಗೆ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ‘ಬಾಲ್ಯ ವಿವಾಹ ನಿಷೇಧ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ, ಮಕ್ಕಳ ಮಾರಾಟ ಹಾಗೂ ಸಾಗಣೆ ಮತ್ತು ಕಾನೂನು ಬಾಹಿರ ದತ್ತು ಕುರಿತು ಜನಜಾಗೃತಿಗಾಗಿ ರೂಪಿಸಿರುವ ಸಂಚಾರಿ ವಾಹನಕ್ಕೆ ಹಸಿರು ಬಾವುಟ ಮೂಲಕ ಚಾಲನೆ ನೀಡಿ, ಮಾತನಾಡಿದರು,

ಹಕ್ಕುಗಳ ಅರಿವು ಇದ್ದಾಗ ಮಾತ್ರ ಬಾಧ್ಯಸ್ಥರು ನ್ಯಾಯ ಕೇಳಲು ಮುಂದೆ ಬರುತ್ತಾರೆ. ಪ್ರತಿ ಮಗುವಿಗೆ ಮತ್ತು ಮಗುವಿನ ಪಾಲಕರಿಗೆ ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಮೂಡಬೇಕು. ಸಂಬಂಧಿತ ಇಲಾಖೆಗಳು ಪ್ರತಿ ಗ್ರಾಮ ಹಾಗೂ ವಾರ್ಡ ಮಟ್ಟದಲ್ಲಿ ಮಕ್ಕಳ ಹಕ್ಕುಗಳ ಜಾಗೃತಿ ಅರಿವು ಕಾರ್ಯಕ್ರಮ ಸಂಘಟಿಸಬೇಕೆಂದು ಅವರು ಹೇಳಿದರು.

ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯಗಳ ಕುರಿತು ಹೆಣ್ಣು-ಗಂಡು ಎನ್ನದೆ ಎಲ್ಲ ಮಕ್ಕಳಿಗೂ ತಿಳುವಳಿಕೆ ನೀಡಬೇಕು. ಶಾಲಾ ಕಾಲೇಜು ಹಂತಗಳಲ್ಲಿ ವಿವಿಧ ರೀತಿಯ ಶೈಕ್ಷಣಿಕ ಕಾರ್ಯಕ್ರಮ, ಸ್ಪರ್ಧೆಗಳನ್ನು ಸಂಘಟಿಸುವ ಮೂಲಕ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಕ್ಕಳಲ್ಲಿ ಸ್ವಯಂ ಕ್ರಿಯಾಶೀಲರಾಗಿ ಭಾಗವಹಿಸುವಂತೆ ಪ್ರೇರೆಪಿಸಬೇಕು. ಮಕ್ಕಳು, ಪಾಲಕರು ಮತ್ತು ನಾಗರಿಕರ ಸಹಭಾಗಿತ್ವದಲ್ಲಿ ಎಲ್ಲರೂ ಶ್ರಮಿಸಿದರೆ ಮಾತ್ರ ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯದಂತ ಅನಿಷ್ಟಗಳನ್ನು ಈ ಸಮಾಜದಿಂದ ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಎಂದು ಪ್ರಧಾನ ಜಿಲ್ಲಾ ನ್ಯಾಯಾಧೀಶ ಉಮೇಶ ಅಡಿಗ ಅಭಿಪ್ರಾಯಪಟ್ಟರು.

ಮುಖ್ಯ ಅತಿಥಿಗಳಾಗಿದ್ದ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿ.ಕಾ.ಸೇ. ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆರ್.ಎಸ್. ಚಿಣ್ಣನ್ನವರ ಮಾತನಾಡಿ, ಮಕ್ಕಳಿಗೆ ಬೆಳೆಯುವ ವಯಸ್ಸಿನಲ್ಲಿ ಮದುವೆ ಮಾಡಿದರೆ ಅವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಕುಂಠಿತವಾಗುತ್ತದೆ. ಅವರಲ್ಲಿ ಅನಾರೋಗ್ಯವು ಉಂಟಾಗುತ್ತದೆ.

ಮಕ್ಕಳಲ್ಲಿ ಹಾಗೂ ಪಾಲಕರಲ್ಲಿ ಬಾಲ್ಯವಿವಾಹದ ಅಪರಾಧ ಕುರಿತು ಪ್ರತಿ ವರ್ಷ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಸರಕಾರಿ ಇಲಾಖೆ ಹಾಗೂ ನ್ಯಾಯಾವಾದಿಗಳ ಸಹಯೋಗದಲ್ಲಿ ಜನಜಾಗೃತಿ ಕಾರ್ಯಕ್ರಮಗಳನ್ನು ಸಂಘಟಿಸುತ್ತಿದೆ. ಬಾಲ್ಯವಿವಾಹ ಆಗುವ ಮತ್ತು ಮಾಡುವ ಎಲ್ಲರಿಗೂ ಕಾನೂನು ಪ್ರಕಾರ ಶಿಕ್ಷೆ ಆಗುತ್ತದೆ ಎಂದು ಅವರು ಹೇಳಿದರು.

ಧಾರವಾಡ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲೆಯ ಸಾರ್ವಜನಿಕರು ಸಹಕರಿಸಬೇಕೆಂದು ಹಿರಿಯ ಸೀವಿಲ್ ನ್ಯಾಯಾಧೀಶ ಆರ್.ಎಸ್. ಚಿಣ್ಣನ್ನವರ ತಿಳಿಸಿದರು.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಅಶೋಕ ಯರಗಟ್ಟಿ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಭಾರತಿ ಶೆಟ್ಟರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಡಿ.ಎಚ್. ಲಲಿತಾ ವಂದಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರಾಜೇಶ್ವರಿ ಸಾಲಗಟ್ಟಿ, ಸಹಾಯಕ ಕಾರ್ಮಿಕ ಆಯುಕ್ತೆ ಮೀನಾ ಪಾಟೀಲ, ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ಮಹೇಶ ಗುಡಿ ಸೇರಿದಂತೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದ್ಯಸರು, ಕಾರ್ಮಿಕ ಇಲಾಖೆ ಅಧಿಕಾರಿಗಳು, ಮಕ್ಕಳ ಸಹಾಯವಾಣಿ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು, ನ್ಯಾಯಾವಾದಿಗಳು ಸೇರಿದಂತೆ ಇತರರು ಭಾಗವಹಿಸಿದ್ದರು.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.