ಶಾಲೆಗಳಲ್ಲಿ ಮೂಲ ಸೌಕರ್ಯ ಪರಿಶೀಲನೆ

ಬೀದರ ಜಿಲ್ಲೆಗೆ ಶಿಕ್ಷಣ ಸಚಿವ ಸುರೇಶಕುಮಾರ ಭೇಟಿ

0

Gummata Nagari : Bidar News

ಬೀದರ : ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರಾದ ಎಸ್.ಸುರೇಶಕುಮಾರ್ ಅವರು ಜಿಲ್ಲೆಯ ವಿವಿಧ ಶಾಲೆಗಳಿಗೆ ಭೇಟಿ ನೀಡಿ, ಮೂಲ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.

ಹುಮನಾಬಾದ ತಾಲೂಕಿನ ಮನ್ನಾಏಖ್ಖೇಳಿಯಲ್ಲಿರುವ ಪ್ರೀಯಾ ಹಿರಿಯ ಪ್ರಾಥಮಿಕ ಶಾಲೆ, ನರೇಂದ್ರ ಹಿರಿಯ ಪ್ರಾಥಮಿಕ ಶಾಲೆ, ಬೀದರ ತಾಲೂಕಿನ ಭಂಗೂರ್‌ನಲ್ಲಿರುವ ನೈಟಿಂಗೆಲ್ ಪಬ್ಲಿಕ್ ಸ್ಕೂಲ್, ಯಾಕತಪೂರ ಗ್ರಾಮದ ಇನ್ಫೆಂಟ್ ಜೀಸಸ್ ಹಿರಿಯ ಪ್ರಾಥಮಿಕ ಶಾಲೆ, ಬೀದರ ನಗರದಲ್ಲಿರುವ ಜನಸೇವಾ ಹಿರಿಯ ಪ್ರಾಥಮಿಕ ಶಾಲೆ, ರಹೇಮಾ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಶಾಲೆಗಳ ಕಟ್ಟಡದ ಸ್ಥಿತಿಗತಿ, ಶೌಚಾಲಯ ವ್ಯವಸ್ಥೆ, ಕುಡಿಯುವ ನೀರಿನ ಸೌಕರ್ಯ ಸೇರಿದಂತೆ ಹಲವಾರು ಮಾಹಿತಿ ಪಡೆದುಕೊಂಡರು.

ಕೆಲವೊಂದು ಶಾಲೆಗಳಲ್ಲಿ ಉತ್ತಮ ಕಟ್ಟಡ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಇರುವುದನ್ನು ಕಂಡು ಸಚಿವರು ತೀವ್ರ ಬೇಸರ ವ್ಯಕ್ತಪಡಿಸಿದರು. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮೂಲ ಸೌಕರ್ಯಗಳಿಲ್ಲದೇ ನಡೆಸಲಾಗುತ್ತಿರುವ ಶಾಲೆಗಳನ್ನು ಗುರುತಿಸಿ, ವರದಿ ಸಲ್ಲಿಸಬೇಕು ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಇದೆ ವೇಳೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಬೀದರ ಜಿಲ್ಲೆಯ ಕೆಲವೆಡೆ ಮೂಲಭೂತ ಸೌಕರ್ಯಗಳಿಲ್ಲದೇ ಶಾಲೆಗಳನ್ನು ನಡೆಸಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಅರವಿಂದಕುಮಾರ ಅರಳಿ ಅವರು ಅಧಿವೇಶನದಲ್ಲಿ ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಖುದ್ದಾಗಿ ವೀಕ್ಷಿಸುವ ಉದ್ದೇಶದಿಂದ ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಎಲ್ಲಾ ವಿವರಗಳನ್ನು ಪಡೆಯುತ್ತಿದ್ದೇನೆ. ಕನಿಷ್ಠ ಸೌಕರ್ಯಗಳಿಲ್ಲದೆಯೇ ಶಾಲೆಗಳನ್ನು ನಡೆಸಲು ಅನುಮತಿ ನೀಡಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಚಿವರು ಇದೆ ವೇಳೆ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಅರವಿಂದಕುಮಾರ ಅರಳಿ, ಶಿಕ್ಷಣ ಇಲಾಖೆಯ ಕಲಬುರಗಿ ವಿಭಾಗದ ಅಪರ ಶಿಕ್ಷಣ ಆಯುಕ್ತರಾದ ನಳೀನ್ ಅತುಲ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಗಂಗಣ್ಣ ಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಸೂರ್ಯಕಾಂತ ಮದಾನೆ, ಬೀದರ ಡಯಟ್ ಪ್ರಾಂಶುಪಾಲರಾದ ಶಶಿಕಾಂತ ಮರ್ತುಳೆ, ಬಿಸಿಯೂಟ ಅಧಿಕಾರಿ ಇನಾಯತ್ ಅಲಿ ಸಿಂಧೆ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಶಾಲೆ ಆರಂಭಿಸಲು ದಿನಾಂಕ ನಿಗದಿಯಾಗಿಲ್ಲ:

ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಬಗ್ಗೆ ರಾಜ್ಯ ಸರ್ಕಾರವು ಯಾವುದೇ ದಿನಾಂಕ ನಿಗದಿ ಮಾಡಿಲ್ಲ. ಸದ್ಯದಲ್ಲೇ ಪ್ರಾರಂಭ ಮಾಡುವ ಬಗ್ಗೆ ಯೋಚಿಸಿಲ್ಲ. ಹೀಗಾಗಿ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರಾದ ಎಸ್.ಸುರೇಶಕುಮಾರ್ ಅವರು ಸ್ಪಷ್ಟಪಡಿಸಿದರು.

ಮಕ್ಕಳ ಹಿತವೇ ಸರ್ಕಾರದ ಮೊದಲ ಆದ್ಯತೆಯಾಗಿದೆ. ಜನರು ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ತಿಳಿಸಿದರು.

ಶಾಲೆಗಳು ನಡೆಯದೇ ಇರುವುದರಿಂದ ಬಾಲ ಕಾರ್ಮಿಕರ ಸಂಖ್ಯೆ ಹೆಚ್ಚಾಗುತ್ತಿದೆ ಎನ್ನುವ ದೂರುಗಳು ಬರುತ್ತಿವೆ. ಆದ್ದರಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಶಿಕ್ಷಣಕ್ಕೆ ಸಂಬಂಧಿಸಿದ ಸಂಘಟನೆಗಳು ಮತ್ತು ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸಿ ಶಾಲೆಗಳು ಆರಂಭಿಸುವ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ಪೋಷಕರು ಸಹ ಮುಕ್ತವಾಗಿ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಇಮೇಲ್ ಐಡಿ ನೀಡಲಾಗಿದೆ. ಶಾಲೆಗಳನ್ನು ಆರಂಭಿಸುವ ಬಗ್ಗೆ ಯಾವುದೇ ಧಾವಂತ ಮತ್ತು ಅವಸರ ಇಲ್ಲ. ಮಕ್ಕಳ ಹಿತ, ಪೋಷಕರ ಕಾಳಜಿಯನ್ನು ಮನಸ್ಸಿನಲ್ಲಿಟ್ಟುಕೊಂಡು ಮುಂದಿನ ನಿರ್ಣಯ ತೆಗೆದುಕೊಳ್ಳಲಾಗುವುದು ಸಚಿವರು ತಿಳಿಸಿದರು.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.