ಮನೆ ಬಾಗಿಲಿಗೆ ಪಿಂಚಣಿ ಹಣ: ಸಚಿವ ಆರ್.ಅಶೋಕ

ಗದಗದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

0

ಸಾಮಾಜಿಕ ಭದ್ರತೆಯ ಪಿಂಚಣಿ ಹಣವನ್ನು ಪೋಸ್ಟ್ ಆಫೀಸ್ ಮೂಲಕ ನೀಡದೇ, ವೃದ್ಧ ನಾಗರಿಕರ ಅಲೆದಾಟ ತಪ್ಪಿಸಲು ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ.
-ಆರ್.ಅಶೋಕ, ಕಂದಾಯ ಸಚಿವ

Gummata Nagari : Gadag News

ಗದಗ : ಪಿಂಚಣಿ ಹಣವನ್ನು ಕೈಯಿಂದ ಕೈಗೆ ಕೊಡುವ ಬದಲು, ನೇರವಾಗಿ ಅರ್ಹ ಪಿಂಚಣಿದಾರರ ಬ್ಯಾಂಕ್ ಖಾತೆಗೆ ಜಮೆ ಮಾಡುವ ವ್ಯವಸ್ಥೆ ಜಾರಿಗೆ ತರಲಾಗುತ್ತೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಪ್ರಕೃತಿ ವಿಕೋಪ ಹಾಗೂ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯದಾದ್ಯಂತ ಪಿಂಚಣಿದಾರರಿಗೆ ಪ್ರತಿವರ್ಷ 7 ಸಾವಿರ ಕೋಟಿ ರೂ. ಪಿಂಚಣಿ ನೀಡಲಾಗುತ್ತಿದೆ. ಹೀಗಾಗಿ ಇನ್ಮುಂದೆ ಪಿಂಚಣಿ ಹಣವನ್ನು ಕೈಯಿಂದ ಕೈಗೆ ಕೊಡುವ ಬದಲು, ನೇರವಾಗಿ ಅರ್ಹ ಪಿಂಚಣಿದಾರರ ಬ್ಯಾಂಕ್ ಖಾತೆಗೆ ಜಮೆ ಮಾಡುವ ವ್ಯವಸ್ಥೆ ಜಾರಿಗೆ ತರಲಾಗುತ್ತೆ. ಅನರ್ಹ ಫಲಾನುಭವಿಗಳನ್ನು ಸುಲಭವಾಗಿ ಗುರುತಿಸಬಹುದು. ಇದರಿಂದ ಸರ್ಕಾರಕ್ಕೆ ಪ್ರತಿವರ್ಷ ಆರು ನೂರು ಕೋಟಿ ರೂ.ನಷ್ಟು ಉಳಿತಾಯವಾಗಲಿದೆ.

ಪಿಂಚಣಿದಾರರ ಆಧಾರ್ ಕಾರ್ಡ್ ಕಡ್ಡಾಯವಾಗಿ ಲಿಂಕ್ ಮಾಡುವ ಮೂಲಕ ಬ್ಯಾಂಕ್ ವಿವರ ಪಡೆದುಕೊಳ್ಳಬೇಕು. ಅಲ್ಲದೇ, ಕೊಟ್ಟಿ ದಾಖಲೆಗಳನ್ನು ಸೃಷ್ಠಿಸಿ ಪಿಂಚಣಿ ಪಡೆಯುತ್ತಿರುವವರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು ಎಂದರು.

ಗುಂಟೆವಾರು ಭೂಮಿ ಖರೀದಿಗೆ ಅವಕಾಶ ಕಲ್ಪಿಸಿದರೆ ನಗರ ಪ್ರದೇಶಗಳಲ್ಲಿ ಅಧಿಕ ಪ್ರಮಾಣದಲ್ಲಿ ಸೈಟ್ ಗಳು ತಲೆ ಎತ್ತುವ ಸಾಧ್ಯತೆಗಳು ಹೆಚ್ಚಿವೆ. ಹೀಗಾಗಿ 5 ಗುಂಟೆಗೂ ಅಧಿಕ ಭೂಮಿಗೆ ಮಾತ್ರ ನೋಂದಣಿಗೆ ಅವಕಾಶ ನೀಡಲಾಗುವುದು. ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಸರ್ಕಾರಿ ಜಮೀನುಗಳನ್ನು ತೆರುವುಗೊಳಿಸುವ ಮೂಲಕ ಒತ್ತುವರಿಯಾಗದಂತೆ ಕ್ರಮ ಕೈಗೊಳ್ಳಬೇಕು.

ಕೋವಿಡ್ -19 ಸೋಂಕು ನಿಯಂತ್ರಿಸಲು ಮುಂಜಾಗ್ರತಾ ಕ್ರಮ ವಹಿಸಿ ಅಭಿವೃದ್ಧಿ ಕಾಮಗಾರಿಗಳತ್ತ ಹೆಚ್ಚು ಒತ್ತು ನೀಡಬೇಕು. ಸರ್ಕಾರದಲ್ಲಿ ಹಣಕಾಸಿನ ಸಮಸ್ಯೆ ಇಲ್ಲ. ಆರೋಗ್ಯ ಉಪಕರಣಗಳ ಖರೀದಿಗೆ ಸಂಬಂಧಿಸಿದಂತೆ ಯಾವುದೇ ನಿರ್ಬಂಧವಿಲ್ಲ. ಆದರೆ, ಖರೀದಿಯ ಬಗ್ಗೆ ಸರಿಯಾದ ಲೆಕ್ಕ ಇರಬೇಕು. ಸದ್ಯ ಕೋವಿಡ್ಗೆ ಔಷಧಿ ಇಲ್ಲದಿರುವುದರಿಂದ ಪ್ರತಿಯೊಬ್ಬರೂ ಮಾಸ್ಕ್ ಬಳಕೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸರ್ಕಾರದ ನಿರ್ದೇಶನಗಳು ಕಟ್ಟುನಿಟ್ಟಾಗಿ ಪಾಲನೆ ಆಗುವಂತೆ ಕ್ರಮ ವಹಿಸಬೇಕು. ಮಾರುಕಟ್ಟೆಯಂತಹ ಪ್ರದೇಶಗಳಲ್ಲಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.

ಪ್ರವಾಹ ಪೀಡಿತ ಗ್ರಾಮಗಳಲ್ಲಿ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಬೇಕು. ಸಂತ್ರಸ್ತರು ನಿಗದಿತ ಸಮಯದೊಳಗೆ ಮನೆ ನಿರ್ಮಿಸುವಂತೆ ನೋಡಿಕೊಳ್ಳಬೇಕು. ಮನೆ ನಿರ್ಮಿಸದವರಿಗೆ ನೋಟಿಸ್ ಜಾರಿ ಮಾಡಿ ‘ಎ’ ಮತ್ತು ‘ಬಿ’ ಕೆಟಗೆರಿಯಿಂದ ‘ಸಿ’ ಕೆಟಗೆರಿಗೆ ತರಲು ಕ್ರಮ ಕೈಗೊಳ್ಳಬೇಕು. ನೆರೆ ಸಂದರ್ಭದಲ್ಲಿ ಹಾನಿಗೊಳಗಾದವರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಸಚಿವರು ಸೂಚಿಸಿದರು. ಅಲ್ಲದೇ, ಜಿಲ್ಲೆಯ ಪ್ರತಿ ಗ್ರಾಮಕ್ಕೊಂದು ಸ್ಮಶಾನ ವ್ಯವಸ್ಥೆ ಮಾಡಬೇಕು. ನರೇಗಾ ಯೋಜನೆಯಡಿ ರಸ್ತೆ, ಕಾಂಪೌಂಡ್ ನಿರ್ಮಾಣಕ್ಕೆ ಕ್ರಮ ವಹಿಸಿ ಎಂದರು.

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಮಾತನಾಡಿ, ಕಳೆದ ವರ್ಷ ಮಲಪ್ರಭಾ ನದಿಗೆ ಅಧಿಕ ಪ್ರಮಾಣದಲ್ಲಿ ನೀರು ಒಮ್ಮೆಲೆ ಹರಿಸಿದ್ದರ ಪರಿಣಾಮವಾಗಿ ತೀವ್ರ ಪ್ರವಾಹ ಉಂಟಾಗಿತ್ತು. ಪ್ರಸಕ್ತ ಸಾಲಿನಲ್ಲಿ ಹಂತ ಹಂತವಾಗಿ ನೀರು ಬಿಟ್ಟಿರುವುದರಿಂದ ನೆರೆಯ ಭೀಕರತೆಯ ಪ್ರಮಾಣ ಕಡೆಮೆ ಇದೆ. ನರಗುಂದ ತಾಲೂಕಿನ ಲಕಮಾಪುರ ಗ್ರಾಮ ಸ್ಥಳಾಂತರಕ್ಕೆ ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದು, ಸಮಸ್ಯೆಗಳನ್ನು ಇತ್ಯರ್ಥಗೊಳಿಸಿ ಶೀಘ್ರದಲ್ಲೇ ಸ್ಥಳಾಂತರಿಸಲಾಗುವುದು. ಅಲ್ಲದೇ, ರಾಜ್ಯದ ಇನ್ನುಳಿದ ಜಿಲ್ಲೆಗಳಲ್ಲಿ ಗುಂಟೆವಾರು ಭೂಮಿ ಖರೀದಿಗೆ ಅವಕಾಶವಿದ್ದು, ಗದಗ ಜಿಲ್ಲೆಯಲ್ಲಿಯೂ ಖರೀದಿಗೆ ಅನುಕೂಲ ಮಾಡಿಕೊಡಬೇಕು. ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಕಳೆದ ಸಾಲಿನಲ್ಲಿ 560 ಕೋಟಿ ರೂ. ಬಿಡುಗಡೆಯಾಗಿತ್ತು. ಆದರೆ, ಪ್ರಸಕ್ತ ಸಾಲಿನಲ್ಲಿ 3 ಕೋಟಿ ರೂ. ಅಷ್ಟೇ ಬಿಡುಗಡೆಯಾಗಿದ್ದು, ಹೆಚ್ಚಿನ ಅನುದಾನ ಬಿಡುಗಡೆಗೊಳಿಸುವಂತೆ ಕಂದಾಯ ಸಚಿವರನ್ನು ಕೋರಿದರು.

ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಗಾಗಿ ಒಟ್ಟು 56,646 ಜನರ ಗಂಟಲು ದ್ರವ ಪರೀಕ್ಷಿಸಲಾಗಿದೆ. ಅದರಲ್ಲಿ 48,834 ಜನರ ವರದಿ ನಕಾರಾತ್ಮಕ ಬಂದಿದ್ದು, 7,690 ಸಕಾರಾತ್ಮಕ ಪ್ರಕರಣಗಳು ಪತ್ತೆ ಆಗಿವೆ. ಗದಗ ತಾಲೂಕೊಂದರಲ್ಲೇ ಶೇ.50% ರಷ್ಟು ಪ್ರಕರಣಗಳು ದಾಖಲಾಗುತ್ತಿವೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲಾಗಿದೆ. ಅಲ್ಲದೇ, ತಾಲೂಕಾಸ್ಪತ್ರೆಗಳಲ್ಲಿ 50 ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಲಾಗುತ್ತಿದೆ. ಕೋವಿಡ್ ಗಾಗಿ 4.78 ಲಕ್ಷ ಹಣ ಬಿಡುಗಡೆಯಾಗಿ ಖರ್ಚಾಗಿದ್ದು, 5 ಕೋಟಿ ರೂ. ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಪ್ರಕೃತಿ ವಿಕೋಪದಡಿ ಒಟ್ಟು 12.27 ಲಕ್ಷ ಅನುದಾನವಿದೆ ಎಂದರು.

ಅಪರ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಪ್ರವಾಹಕ್ಕೆ 6254 ಹೆಕ್ಟೇರ್ ಕೃಷಿ ಬೆಳೆ ಮತ್ತು 5553 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಪ್ರಕೃತಿ ವಿಕೋಪಕ್ಕೆ 3 ಮಾನವ ಜೀವ ಹಾನಿಗೆ 15 ಲಕ್ಷ ರೂ. ಹಾಗೂ 17 ಜಾನುವಾರುಗಳ ಹಾನಿಗಾಗಿ 64 ಸಾವಿರ ಪರಿಹಾರ ಧನ ನೀಡಲಾಗಿದೆ. ಜಿಲ್ಲೆಯ ಒಟ್ಟು 330 ಗ್ರಾಮಗಳಲ್ಲಿ 111 ಸ್ಮಶಾನಕ್ಕೆ ಭೂಮಿ ಇಲ್ಲ. 40 ಗ್ರಾಮಗಳಲ್ಲಿ ರುದ್ರಭೂಮಿಗಾಗಿ ಜಮೀನು ಖರೀದಿಗೆ ಅನುದಾನ ಬಿಡುಗಡೆ ಮಾಡುವಂತೆ ಕೋರಿದೆ. ವಿವಿಧ ಯೋಜನೆಯಡಿ ಒಟ್ಟು 13,6,463 ಜನರು ಪಿಂಚಣಿ ಪಡೆಯುತ್ತಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲಾ ಪಂಚಾಯತ ಅಧ್ಯಕ್ಷ ರಾಜೂಗೌಡ ಕೆಂಚನಗೌಡ್ರ, ಜಿಪಂ ಉಪಾಧ್ಯಕ್ಷೆ ಶೋಭಾ ಮೇಟಿ, ಶಾಸಕ ರಾಮಣ್ಣ ಲಮಾಣಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಗಮೇಶ ದುಂದೂರ, ಜಿಪಂ ಸಿಇಒ ಡಾ.ಆನಂದ್ ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.